ಸಮಗ್ರ ಸುದ್ದಿ

ಕುಡಿಯುವ ನೀರಿಗೆ ಆಗ್ರಹಿಸಿ ಗ್ರಾಮ ಪಂಚಾಯ್ತಿಗೆ ಲಾಕ್!

Share It


ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ ಗ್ರಾಮಸ್ಥರು ಗ್ರಾಮ ಪಂಚಾಯ್ತಿ ಕಾರ್ಯಾಲಯ ಲಾಕ್ ಮಾಡಿ ಪ್ರತಿಭಟಿಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕು ಬೂದಿಗೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮ ಪಂಚಾಯ್ತಿ ಕಾರ್ಯಾಲಯದ ಮುಂದೆ ಖಾಲಿ ಕೊಡಗಳನ್ನು ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು.
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೂಗಳತೆ ದೂರದಲ್ಲಿರುವ ಬೂದಿಗೆರೆ ಗ್ರಾಮದಲ್ಲಿ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಯಾಗದೆ ಜನರು ಬಹಳ ದಿನಗಳಿಂದ ತೊಂದರೆ ಅನುಭವಿಸುತ್ತಿದ್ದು, ಹಲವು ಬಾರಿ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ಅಧ್ಯಕ್ಷರಿಗೆ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದರು ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.


ಇನ್ನು ವಾಟರ್ ಮ್ಯಾನ್ಗಳು ಸರಿಯಾಗಿ ಕರ್ತವ್ಯ ನಿರ್ವಹಿಸದ ಕಾರಣ ಗ್ರಾಮದಲ್ಲಿ ಕುಡಿಯುವ ನೀರು ಸಮರ್ಪಕವಾಗಿ ಪೂರೈಕೆಯಾಗುತ್ತಿಲ್ಲ. ಕೂಡಲೇ ವಾಟರ್ಮ್ಯಾನ್ಗಳನ್ನು ಬದಲಾವಣೆ ಮಾಡಬೇಕು ಎಂದು ಆಗ್ರಹಿಸಿದರು. 20 ದಿನಗಳಾದರೂ ಮನೆಗಳಿಗೆ ನೀರು ಬಾರದೆ ಯಾವಾಗಲು ಟ್ರ್ಯಾಕ್ಟರ್ನಿಂದ ನೀರು ಹಾಕಿಸಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಳಲು ತೋಡಿಕೊಂಡರು.


ಇದೇ ವೇಳೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಪಿಡಿಓ ಚನ್ನಪ್ಪ, ಅಧ್ಯಕ್ಷೆ ವರಲಕ್ಷ್ಮೀ ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ಕೂಡಲೇ ಸಮಸ್ಯೆ ಬಗೆಹರಿಸುವಂತೆ ಗ್ರಾಮಸ್ಥರು ಪಟ್ಟು ಹಿಡಿದರು. ಸಮಸ್ಯೆ ಬಗೆಹರಿಸಲು ಸಮಯಾವಕಾಶ ಕೇಳಿದ ಪಿಡಿಓ ಮತ್ತು ಅಧ್ಯಕ್ಷೆ ಮೂರು ದಿನಗಳಲ್ಲಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಭರವಸೆ ನೀಡಿದರು.

You cannot copy content of this page